ಸಭೆಗೆ ಗೈರಾದವರಿಗೆ ಕಾರಣ ಕೇಳಿ ನೋಟಿಸ್ ಜಾರಿ
ಯಾದಗಿರಿ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆ ಯಡಿ ಮಂಜೂರಾದ ಅನುದಾನಕ್ಕೆ ತಕ್ಕಂತೆ ಭೌತಿಕ ಪ್ರಗತಿ ಸಾಧಿಸಲು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಎಸ್ ಸಿ ಪಿ/ಟಿಎಸ್ ಪಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿದ್ದ ಅವರು, ಅಧಿಕಾರಿಗಳು ಮಾರ್ಚ ವರೆಗೆ ಕಾಯದೇ ಈಗಾಗಲೇ ಮಂಜೂರಾಗಿರುವ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಶೇ.ನೂರರಷ್ಟು ಭೌತಿಕ ಪ್ರಗತಿ ಸಾಧಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯ ಪ.ಜಾತಿ, ಪರಿಶಿಷ್ಟ ಪಂಗಡ ಜನಾಂಗಗಳ, ಅಲೆಮಾರಿ ಜನಾಂಗದ ಕಾಲನಿಗಳಿಗೆ ಹಾಗೂ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ವಿಲ್ಲದ ಬಗ್ಗೆ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ಪ್ರಸ್ತಾವನೆಯನ್ನು ಜೆಸ್ಕಾಂ ಅಧಿಕಾರಿಗಳಿಗೆ ಒಂದು ವಾರರೊಳಗೆ ಸಲ್ಲಿಸಬೇಕು. ಜೆಸ್ಕಾಂ ಅಧಿಕಾರಿಗಳು ವರದಿ ಆಧಾರದಲ್ಲಿ ಆಧ್ಯತೆ ಮೇಲೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಈಗಾಗಲೇ ಡಿಸೆಂಬರ್ ಮಾಹೆ ಆರಂಭವಾಗಿದೆ. ಅಧಿಕಾರಿಗಳು ಫಲಾನುಭವಿ ಆಧಾರಿತ ಯೋಜನೆಯಡಿ ಆಯ್ಕೆ ಮಾಡಿ ತಕ್ಷಣ ಸೌಲಭ್ಯ ಕಲ್ಪಿಸಬೇಕು.ಅದರಂತೆ ಕಾಮಗಾರಿಗಳ ವೇಗ ಹೆಚ್ಚಿಸಿ ಮಾರ್ಚ ವರೆಗೆ ಕಾಯದೇ ಗುರಿಗೆ ತಕ್ಕಂತೆ ಶೇ.ನೂರರಷ್ಟು ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸಲು ಅವರು ಸೂಚನೆ ನೀಡಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆ ಗೆ ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಮಂಜೂರಾದ ಅನುದಾನ,ಪ್ರಗತಿ ವರದಿ ಸಲ್ಲಿಸಬೇಕು. ಅನುದಾನ ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳು ಭೌತಿಕವಾಗಿ ಸೂಕ್ತ ಪ್ರಗತಿ ಸಾಧಿಸಬೇಕು.ಭೌತಿಕ ಪ್ರಗತಿಗೆ ಅನುಗುಣವಾಗಿ ಖರ್ಚು ವೆಚ್ಚ ಮಾಡಿ ವರದಿ ಸಲ್ಲಿಸಲು ತಿಳಿಸಿದ ಅವರು ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ, ಸಮಾಜ ಕಲ್ಯಾಣಾಧಿಕಾರಿ ಚನ್ನಬಸವ,ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.