ಯಾದಗಿರಿ: ರಾಜ್ಯದ ಕಾಂಗ್ರೆಸ್ ಸರ್ಕಾರವು ‘ ಹಬ್ ಅಂಡ್ ಸ್ಪೋಕ್ ‘ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ ಎಂದು ಎಐಡಿಎಸ್ಓ ಸಂಘಟನೆ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ. ತೀವ್ರವಾಗಿ ಖಂಡಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವು ದಾಗಿ ಸರ್ಕಾರವು ತಿಳಿಸಿದ್ದು, ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣ ವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. 4 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆಯನ್ನು ಎಐಡಿಎಸ್ಓ ರಾಜ್ಯ ಸಮಿತಿಯು ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ ಎಂದಿದ್ದಾರೆ.
ಹಿಂದಿನ ಬಿಜೆಪಿ ರಾಜ್ಯ ಸರ್ಕಾರವು ಇದೇ ನೆಪವೊಡ್ಡಿ ಎನ್ಈಪಿ -2020 ರ ಅಡಿಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚ ಲು ಮುಂದಾಗಿತ್ತು. ಅದರ ವಿರುದ್ಧ ರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ಬೃಹತ್ ಆಂದೋಲನ ನಡೆಸಿ 35 ಲಕ್ಷಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸುವುದರ ಮೂಲಕ ಶಾಲೆಗಳನ್ನ ರಕ್ಷಿಸಿದ್ದರು. ಆದರೆ, ಈಗ ಮತ್ತೆ ಸರ್ಕಾರಿ ಶಾಲೆಗಳ ನ್ನು ಮುಚ್ಚುವುದರ ಮುಖಾಂತರ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ರೈತ-ಕಾರ್ಮಿಕರು ಹಾಗೂ ಜನ ಸಾಮಾನ್ಯ ರಿಗೆ ವಿಶ್ವಾಸದ್ರೋಹವೆಸಗಿದೆ.
ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’! ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯ ಗಳನ್ನು ನೀಡಿ ರಕ್ಷಿಸಬೇಕೆಂದು ಹೇಳಿದ್ದಾರೆ. ಇದರ ವಿರುದ್ಧ ಪ್ರಬಲ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.