ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಜನ- ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆವಹಿಸಿ | ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ
ಯಾದಗಿರಿ: ಬೇಸಿಗೆಗಾಲ ಪ್ರಾರಂಭಗೊಂಡಿದ್ದು, ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು ಮತ್ತು ಮಾಪನಾ ಶಾಸ್ತ್ರ ಇಲಾಖೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಮನೋಜ ಜೈನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜನರಿಗೆ ನೀರಿನ ಸಮಸ್ಯೆಯಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಜಲ ಮೂಲಗಳ ಪರೀಕ್ಷಿಸಿದ ನೀರನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾಯಿಟ್ಟು ನೀರು ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಪ್ರತಿ ಗ್ರಾಮ ಪಂಚಾಯತ್ ವಾರು 15 ನೇ ಹಣಕಾಸು ಅನುದಾನ ಲಭ್ಯವಿದ್ದು , ಸಂಬಂಧಪಟ್ಟ ಅಧಿಕಾರಿಗಳು ಸಕ್ರಿಯರಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳು ಅವಧಿಗೆ ನೀರಿನ ಲಭ್ಯತೆ ಆಧಾರದ ಮೇಲೆ, ಪರಿಶೀಲಿಸಿ ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರನ ಘಟಕಗಳನ್ನು ದುರಿಸ್ತಿಗೊಳಿಸಬೇಕು. ಪ್ರತಿ ಗ್ರಾಮ ಪಂಚಾಯತವಾರು ಯೋಜನಾ ಬದ್ಧವಾಗಿ, ಯೋಜನೆ ರೂಪಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ನೀರಿಗಾಗಿ ತುರ್ತು ಸಂದರ್ಭದಲ್ಲಿ ಅನುದಾನ ಲಭ್ಯ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಜಾನುವಾರು ಹಾಗೂ ಪಕ್ಷಿಗಳ ಅನುಕೂಲಕ್ಕಾಗಿ ಕುಡಿಯುವ ನೀರಿಗಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿ ಈ ಹಿಂದೆ ನೀರಿನ ತೊಟ್ಟಿಗಳನ್ನು ನಿರ್ಮಿಸಲಾಗಿದ್ದು, ಅವುಗಳ ನ್ನು ಪರಿಶೀಲಿಸಿ ಸಕ್ರಿಯವಾಗಿರುವಂತೆ ನೋಡಿಕೊಳ್ಳಬೇಕು. ಅಭಿಯಾನ ರೂಪದಲ್ಲಿ ಈ ಕಾರ್ಯ ಮಾಡುವಂತೆ ಅವರು ಸೂಚಿಸಿದರು.
ಜಲಧಾರೆ ಯೋಜನೆ ಪೂರ್ಣಗೊಳ್ಳುವವರೆಗೆ ಜಲಜೀವನ ಮಿಷನ್ ಯೋಜನೆಯಡಿ ಕಾಮಗಾರಿ ಪೂರ್ಣಗೊಂಡಿರುವ ಕಡೆ ನೀರು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ತೀವ್ರ ತಾಪಮಾನ ಇರುವ ಹಿನ್ನೆಲೆಯಲ್ಲಿ, ಈ ಕುರಿತು ಮುನ್ನೆಚ್ಚರಿಕೆಗಳ ಬಗ್ಗೆ ಸಾರ್ವಜನಿಕರಲ್ಲಿ ಪ್ರತಿ ಗ್ರಾಮವಾರು ಅರಿವು ಮೂಡಿಸಬೇಕು.
ವಿವಿಧ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯ ಇರುವಂತೆ ನೋಡಿಕೊಳ್ಳಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ತಾಲೂಕ ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿಕೊಂಡು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅವಶ್ಯಕತೆ ಇರುವ 132 ಟೀಚಿಂಗ್ ಸ್ಟಾಫ್ ಹಾಗೂ 732 ನಾನ್ ಟೀಚಿಂಗ್ ಸ್ಟಾಫ್ ಮತ್ತು ಕ್ಲಿನಿಕಲ್ ವಿಭಾಗಕ್ಕೆ ಅವಶ್ಯಕತೆ ಇರುವ ಸಾಧನ, ಸಲಕರಣೆಗಳ ಬಗ್ಗೆ ಸಮಗ್ರ ವರದಿಯನ್ನು ಕಾಲೇಜ್ ಡೀನ್ ಮೂಲಕ ಸಲ್ಲಿಸಬೇಕು. ಅದರಂತೆ ಜಿಲ್ಲೆಯಲ್ಲಿ 150 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 311 ಅಂಗನವಾಡಿ ಸಹಾಯಕಿಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದ್ದು, ಶಾಶ್ವತ ಪರಿಹಾರ ನೀಡಿದ ಒಳ್ಳೆಯ ಕ್ರಮ ಇದಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಸೂಕ್ತ ಕ್ರಿಯಾಯೋಜನೆ ರೂಪಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದರು. ಅದರಂತೆ ಕೆಕೆಆರ್ಡಿಬಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತು ತುಲನಾತ್ಮಕ (ಕಂಪೇರಿಟಿವ್) ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಉದ್ಯೋಗ ಖಾತ್ರಿ ಯೋಜನೆ, ಸ್ವಚ್ಛ ಭಾರತ ಮಿಷನ್, ವಿವಿಧ ವಸತಿ ಸೌಲಭ್ಯಗಳು ಕಲ್ಪಿಸಲು ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕು. ಆಹಾರ ಇಲಾಖೆಯಿಂದ ಆಹಾರಧಾನ್ಯ ಕಳ್ಳ ಸಾಗಾಣಿಕೆ ಬಗ್ಗೆ ತೀವ್ರ ನಿಗಾ ಇಡಬೇಕು. ಸೈದಾಪುರ್ ತ್ಯಾಜ್ಯ ನಿರ್ವಹಣಾ ಘಟಕದ ಬಗ್ಗೆ ವರದಿ ಸಲ್ಲಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
