ಯಾದಗಿರಿ: ಜಿಲ್ಲೆಯ 106 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಹಾಜರಾತಿಯನ್ನು ಪಾರದರ್ಶಕಗೊಳಿಸುವ ಉದ್ದೇಶದಿಂದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಸರ್ ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಅಣಬಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಯಾದಗಿರಿ ಜಿಲ್ಲೆಯ 6 ತಾಲ್ಲೂಕುಗಳ 80 ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಗಳ ಹಾಜರಾತಿ ಕುರಿತು ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿದ್ದು, ಹಲವೆಡೆ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗದೇ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ನಕಲಿ ಬಯೋಮೆಟ್ರಿಕ್ ಸಹಿ ಮಾಡಿ ಪಿಡಿಓ ವಂಚನೆ ಮಾಡುತ್ತಿದ್ದು, ಕೂಡಲೆ ಇವರ ಮೇಲೆ ನಿರ್ದಾಕ್ಷö್ಯ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯಿತಿಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಿದರೆ ಸಿಬ್ಬಂದಿಗಳ ಹಾಜರಾತಿ ದಾಖಲೆಗಳು ಪಾರದರ್ಶಕವಾಗಲಿದ್ದು, ಸಾರ್ವಜನಿಕರಿಗೆ ಅಗತ್ಯ ಸೇವೆಗಳು ಸಮಯಕ್ಕೆ ದೊರೆಯಲಿವೆ. ಜೊತೆಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಮೇಲ್ವಿಚಾರಣೆ ಮಾಡಲು ಸಹ ಅನುಕೂಲವಾಗಲಿದೆ ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಶೀಘ್ರವೇ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
