ಭಕ್ತಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ |ಕಾಗಿನೆಲೆಯನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿ | ಸಿಎಂ ಡಿಕೆಶಿ ಅಭಿಪ್ರಾಯ
ಹಾವೇರಿ: ಹಾವೇರಿಯ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸ ಮೆಡಿಕಲ್ ಕಾಲೇಜು ಎಂದು ಮರುನಾಮಕರಣ ಮಾಡಲಾಗುವುದು. ಆ ಮೂಲಕ ಕನಕದಾಸರ ಹೆಸರನ್ನು ಶಾಶ್ವತವಾಗಿ ಉಳಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ–2026 ಕಾರ್ಯಕ್ರಮವನ್ನು ಉದ್ಘಾಟಿಸಿ, ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಕಾಗಿನೆಲೆ ಶ್ರೀಗಳ ಬೇಡಿಕೆಯಂತೆ ವಿದ್ಯಾರ್ಥಿ ನಿಲಯಕ್ಕೆ 5 ಕೋಟಿ ರೂ. ಅನುದಾನ ನೀಡಲಾಗುವುದು. ಭೂಮಿಯ ಕುರಿತು ನೀಡಲಾಗಿರುವ ಬೇಡಿಕೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಪ್ರವೇಶದಲ್ಲಿ 15% ಮೀಸಲಾತಿ ನೀಡಲಾಗುತ್ತಿತ್ತು. ಇದರಲ್ಲಿ 7.5% ಅನ್ನು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ನೀಡಲು ಸರ್ಕಾರ ತೀರ್ಮಾನಿಸಿದೆ. ಕನಕದಾಸರ ಕರ್ಮಭೂಮಿ ಕಾಗಿನೆಲೆಯನ್ನು ಜಾಗತಿಕ ಮಟ್ಟದ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿ. ಕನಕದಾಸರು ಮನುಕುಲದ ಆಸ್ತಿ. ನಾವು ಕೇವಲ ಅವರ ಭಾವಚಿತ್ರಕ್ಕೆ ಪೂಜೆ ಮಾಡುವುದಷ್ಟೇ ಅಲ್ಲ, ಅವರ ಸಮಾನತೆಯ ತತ್ವವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕನಕ ಜಯಂತಿಯಂದು ಕನಕದಾಸರ ಐಕ್ಯ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸುವ ಭಾಗ್ಯ ಸಿಕ್ಕಿದೆ. ಕನಕದಾಸರು ಕೀರ್ತನೆಗಳ ಮೂಲಕ ಜಾತಿಯ ವಿಷಬೀಜ ಕಿತ್ತುಹಾಕಲು ಶ್ರಮಿಸಿದ ಮಹಾನ್ ಕ್ರಾಂತಿಕಾರಿ. ಕುಲದ ಹೆಸರಿನಲ್ಲಿ ತಾರತಮ್ಯ ಬೇಡ.
ಜಿಲ್ಲೆಯ 7 ಶಾಸಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಬ್ಯಾಡಗಿ ಕ್ಷೇತ್ರದ ಶಾಸಕರು ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆ ಮೂಲಕ 137 ಕೆರೆಗಳಿಗೆ ನೀರು ತುಂಬಿಸಲು ಮನವಿ ಮಾಡಿದ್ದರು, ಈಗಾಗಲೇ 115 ಕೋಟಿ ರೂ. ಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ಜಿಲ್ಲೆಯ ಇತರೆ ಶಾಸಕರು ತಮ್ಮ ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದಾರೆ ಎಂದರು.
ಕಾಗಿನೆಲೆ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲು ಚಿಂತನೆ ನಡೆಸಲಾಗಿದೆ. ಶ್ರೀಗಳು ಅಧಿಕಾರಿಗಳ ವಿಚಾರ ಪ್ರಸ್ತಾಪಿಸಿದರು. ಅವರಿಗೆ ಯಾವ ರೀತಿ ನ್ಯಾಯ ಒದಗಿಸಲು ಸಾಧ್ಯ ಎಂಬುದರ ಕುರಿತು ಚಿಂತನೆ ನಡೆಸಲಾಗುವುದು ಎಂದಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ರೇವಣಸಿದ್ದೇಶ್ವರ ಮಠದ ಶ್ರೀ ಶಾಂತಮಯ ಮಹಾಸ್ವಾಮಿಗಳು, ಸಚಿವರಾದ ರುದ್ರಪ್ಪ ಲಮಾಣಿ, ಶಾಸಕರಾದ ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಯು. ಬಿ. ಬಣಕಾರ್, ಪ್ರಕಾಶ್ ಕೋಳಿವಾಡ್, ಯಾಸಿರ್ ಖಾನ್ ಪಠಾಣ್, ಉಮೇಶ್ ಮೇಟಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್. ಎಂ. ರೇವಣ್ಣ ಸೇರಿದಂತೆ ಪರಿಷತ್ ಸದಸ್ಯರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.




