ಎನ್‌ಡಿಎ ಪರೀಕ್ಷೆಯಲ್ಲಿ ಮಿಂಚಿದ ಬೀದರಿನ ಗುರುಕುಲ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಅಭಿನಂದನೆ
ಬೀದರ್: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಾಧನೆ ಗೈದ ಬೀದರ ನಗರದ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಭಿಷೇಕ ಚಂದ್ರಕಾಂತ ಹಾಗೂ ಸುದರ್ಶನ ಬಿರಾದಾರ ಅವರಿಗೆ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಿ, ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಪರಮಪೂಜ್ಯ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು, ಹಿರೇಮಠ ಸಂಸ್ಥಾನದ ಪೀಠಾಧಿಪತಿ ಪರಮಪೂಜ್ಯ ಗುರುಬಸವ ಪಟ್ಟದ್ದೇವರು ಹಾಗೂ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ಆಶೀರ್ವದಿಸಿ, ಮುಂದಿನ ಎಸ್‌ಎಸ್‌ಬಿ ಸಂದರ್ಶನದಲ್ಲಿಯೂ ಯಶಸ್ಸು ಗಳಿಸಿ ದೇಶಸೇವೆಗೆ ಅರ್ಪಿಸಿಕೊಳ್ಳಲಿ ಎಂದು ಹಾರೈಸಿದರು.
ಕಾಲೇಜಿನ ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಲೋಕೇಶ ಉಡಬಾಳೆ, ಶೈಕ್ಷಣಿಕ ನಿರ್ದೇಶಕ ಕಾಶಿನಾಥ ನೀಲಶೆಟ್ಟಿ, ರಾಘವೇಂದ್ರ ಪತ್ರಿ ಅವರು ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಸಂಸ್ಥೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.
