ಬೀದರ : ಸಂವಿಧಾನದ ಆಶಯಗಳಂತೆ ನಾವೆಲ್ಲರೂ ಬದುಕೋಣ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.

ಬುಧವಾರ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂವಿಧಾನ ಪೀಠಿಕೆ ಪ್ರತಿಯನ್ನು ಬೋಧಿಸಿ ಮಾತನಾಡಿದರು.

ನಮ್ಮ ಸಂವಿಧಾನ ನಮಗೆ ಎಲ್ಲಾ ರೀತಿಯ ಸ್ವಾತಂತ್ರ‍್ಯ, ಹಕ್ಕುಗಳು ನೀಡುವುದರ ಮೂಲಕ ಪ್ರತಿಯೊಬ್ಬರು ಸಮಾಜದಲ್ಲಿ ಸಮಾನರಾಗಿ ಬಾಳುವಂತೆ ಹಾಗೂ ವ್ಯಕ್ತಿ ಗೌರವ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಸೇರಿದಂತೆ ಇತರೆ ಎಲ್ಲಾ ರೀತಿಯ ಸಮಾನ ಅವಕಾಶ ಹಾಗೂ ಮತದಾನದ ಹಕ್ಕು, ಮಹಿಳೆಯರಿಗೆ ವಿಶೇಷ ಸ್ಥಾನಮಾನ ನಮ್ಮ ಸಂವಿಧಾನ ಕಲ್ಪಿಸಿದೆ ಎಂದರು.ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ಸಿಕ್ಕ ಮೇಲೆ ನಮ್ಮದೇ ಆದ ಕಾನೂನು ರೂಪಿಸುವ ಸಂವಿಧಾನ ಇರಲಿಲ್ಲ. 1950 ಜನವರಿ.26 ರಂದು ಸಂವಿಧಾನ ಜಾರಿಗೆ ಬಂದ ಮೇಲೆ ಒಂದು ಪರಿಪೂರ್ಣ ರಾಷ್ಟ್ರವಾಗಿ ಹೊರಹೊಮ್ಮಿತು. 1946ರಲ್ಲಿ ಮೊದಲ ರಚನಾ ಸಭೆ ನಡೆಯಿತು. ನಂತರ 1947 ಆಗಸ್ಟ್ 29 ರಂದು ಸಂವಿಧಾನ ಕರಡು ಸಮಿತಿ ರಚಿಸಿ ಅದರ ಅಧ್ಯಕ್ಷರಾಗಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಆಯ್ಕೆ ಮಾಡಲಾಯಿತು.

ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಾಯನ ಮಾಡಿ, ಜಗತ್ತಿನ ಶ್ರೇಷ್ಠ ಮತ್ತು ಅತಿ ದೊಡ್ಡ ಲಿಖಿತ ಸಂವಿಧಾನವನ್ನು ಮಹಾ ಮಾನವತಾವಾದಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರು ನಮಗೆ ನೀಡಿದ್ದಾರೆ. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ನೀಡುವಲ್ಲಿ ಮತ್ತು ಯಾರು ಮೇಲೆ ಕೀಳು ಎನ್ನದೇ ಹಾಗೂ ವಿವಿಧ ಜಾತಿ, ಧರ್ಮ, ಭಾಷೆ, ಸಂಸ್ಕೃತಿ, ಆಚಾರ ವಿಚಾರ ಹೊಂದಿದರು ಕೂಡ ಎಲ್ಲರೂ ಒಂದೇ ಎಂದು ಐಕ್ಯತೆ ಸಾರುವ ಸಂವಿಧಾನ ನಮ್ಮದಾಗಿದೆ ಎಂದರು.

ನಮ್ಮ ದೇಶಕ್ಕೆ ಸ್ವಾತಂತ್ರ‍್ಯ ಬಂದಾಗ ಬಹಳ ಬಡತನ ಹಾಗೂ ಆರ್ಥಿಕ ವ್ಯವಸ್ಥೆ ದುಸ್ಥಿತಿಯಲ್ಲಿತ್ತು. ಕೇಂದ್ರದಲ್ಲಿ ನಮ್ಮ ಸರ್ಕಾರ ಸತತವಾಗಿ ಬಂದು ಕೈಗಾರಿಕೆ ಕ್ರಾಂತಿ, ಹಸಿರು ಕ್ರಾಂತಿ, ಸಂಪರ್ಕ ಕ್ರಾಂತಿ, ಉದ್ಯೋಗ ಸೃಷ್ಟಿ, ವಿಜ್ಞಾನ ತಂತ್ರಜ್ಞಾನ ಬೆಳವಣಿಗೆ, ಬಡತನ ನಿರ್ಮೂಲನೆ ಅಂತಹ ಹಲವು ಕ್ರಮಗಳನ್ನು ಕೈಗೊಂಡು ಪ್ರಗತಿ ಮತ್ತು ಅಭಿವೃದ್ಧಿಗಾಗಿ ಶ್ರಮಿಸಲಾಗಿದೆ. ನಮ್ಮ ರಾಜ್ಯದಲ್ಲಿ ನಮ್ಮ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರುವುದರ ಮೂಲಕ ಜನರ ಜೀವನ ಮಟ್ಟ ಸುಧಾರಣೆ ಮಾಡಲಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಎಸ್.ಸಿ/ಎಸ್.ಟಿ ಮಕ್ಕಳಿಗೆ 31 ಕೆ.ಪಿ.ಎಸ್ ಶಾಲೆ ಆರಂಭಿಸಲಾಗುತ್ತಿದೆ ಮತ್ತು ಕಾರ್ಮಿಕರ ಮಕ್ಕಳಿಗೆ ವಿಶೇಷವಾಗಿ ವಸತಿ ಶಾಲೆ ನಿರ್ಮಾಣ ಮಾಡಲಾಗುತ್ತಿದೆ ಹಾಗೂ ಬೀದರ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿದೆ ಎಂದರು.

ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ವಿಠಲದಾಸ ಪ್ಯಾಗೆ ಅವರು ಈ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸ ನೀಡಿದರು. ಇದಕ್ಕೂ ಮುನ್ನ ಸಚಿವರು ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ರಥ ಮೆರವಣಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಅಧ್ಯಕ್ಷರಾದ ಬಾಬು ಹೊನ್ನನಾಯ್ಕ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ , ಗೋವಿಂದ ಸ್ವಾಮಿಗಳು, ಭಂತೆ ಜ್ಞಾನಸಾಗರ, ದಮ್ಮ ಕಿರ್ತ, ಅನಿಲ ಬೆಲ್ದಾರ , ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಮಕ್ಕಳು ಮತ್ತು ಇತರರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!