ಬೀದರ: ಜಿಲ್ಲೆಯಲ್ಲಿ ಪ್ರತಿವರ್ಷ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಸಿ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಸಿಪಿ ಮತ್ತು ಟಿಎಸ್‌ಪಿ ಹಣವನ್ನು ವಶಿಷ್ಠ ಜಾತಿ ಮತ್ತು ಪ್ರಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸರಿಯಾಗಿ ಖರ್ಚು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಈ ವರ್ಗದ ಜನರಿಗೆ ಸಂವಿಧಾನದ ಕಲಂ 16 ಅಡಿಯಲ್ಲಿ ನ್ಯಾಯ ದೊರಕಿಸುವ ಕೆಲಸವನ್ನು ಆಯೋಗ ನಿರಂತರವಾಗಿ ಮಾಡುತ್ತಿದೆ ಎಂದು ಹೇಳಿದರು.

ನಮ್ಮ ಆಯೋಗದಿಂದ ಈಗಾಗಲೇ ಸುಮಾರು 150 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಗೆ ಮುನ್ನ ಜಿಲ್ಲೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲಾಗಿದೆ ಎಂದು ತಿಳಿಸಿದರು.

ಈ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳಾಗಿ ಜಮೀನಿನ ಸಮಸ್ಯೆ, ದೌರ್ಜನ್ಯ ಪ್ರಕರಣಗಳು ಹಾಗೂ ನಕಲಿ ಜಾತಿ–ಆದಾಯ ಪ್ರಮಾಣ ಪತ್ರ ವಿತರಣೆಗಳಿವೆ ಎಂದು ಹೇಳಿದರು. ಇಂತಹ ವಿಷಯಗಳನ್ನು ಆಯೋಗ ಗಂಭೀರವಾಗಿ ಪರಿಗಣಿಸಲಿದೆ ಎಂದು ಭರವಸೆ ನೀಡಿದರು.

ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡದ ಜನರು ಅರಣ್ಯ ಭೂಮಿಯಲ್ಲಿ ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದು, 53, 57 ಮತ್ತು ಸಿ ಫಾರಂ ಹೊಂದಿರುವವರು ಅರ್ಜಿ ಸಲ್ಲಿಸಿದ್ದಾರೆ. ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸಬಾರದು ಎಂದು ಅವರು ಸ್ಪಷ್ಟಪಡಿಸಿದರು.

ಮುಂದಿನ ತಿಂಗಳು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಸಾಗುವಳಿ ಮಾಡುತ್ತಿರುವ ಜನಾಂಗದವರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲು ಆಯೋಗ ಸೂಚಿಸಲಿದೆ ಎಂದರು.

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡದ ಜನರ ಭೂಮಿಗೆ ಸಂಬಂಧಿಸಿದ ಫೊಡ್ಡಿ ಸೇರಿದಂತೆ ಇತರೆ ಕೆಲಸಗಳನ್ನು ಕಂದಾಯ ಇಲಾಖೆ ತ್ವರಿತಗತಿಯಲ್ಲಿ ಮಾಡಬೇಕೆಂದು ಆಗ್ರಹಿಸಿದರು. ಮಸಣ ಭೂಮಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಬೇಡಿಕೆ ಇರುವ ಗ್ರಾಮಗಳಿಗೆ ಭೂಮಿ ಒದಗಿಸುವುದು ಅನಿವಾರ್ಯ ಎಂದು ಹೇಳಿದರು.

ನಕಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತಡೆಯಲು ಮುಂದಿನ ದಿನಗಳಲ್ಲಿ ಕುಲಶಾಸ್ತ್ರೀಯ ಅಧ್ಯಯನದ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಅಲೆಮಾರಿ ಜನಾಂಗದವರ ಸಮಸ್ಯೆಗಳನ್ನು ಆಲಿಸಲು ಅವರ ಹಟ್ಟಿಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಆಯೋಗದ ಸದಸ್ಯರಾದ ಸುನೀಲ ಉಕ್ಕಲಿ, ಕಾರ್ಯದರ್ಶಿ ಡಾ.ಎಚ್.ಎಸ್.ಶಿವರಾಮ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬೀದರ ಮಹಾನಗರ ಪಾಲಿಕೆಯ ಆಯುಕ್ತರಾದ ಮುಕುಲ್ ಜೈನ್, ಸೇರಿದಂತೆ ಅನೇಕ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!