ದೇಶದ 13 ನೇ ಪ್ರಧಾನಿಯಾಗಿದ್ದ ಸಿಂಗ್ | ಪ್ರಸಿದ್ಧ ಅರ್ಥಶಾಸ್ತ್ರಜ್ಞ | 5 ಬಾರಿ ಅಸ್ಸಾಂನಿಂದ ರಾಜ್ಯಸಭೆಗೆ ಪ್ರವೇಶ | ರಾಜ್ಯದಲ್ಲಿ ಶುಕ್ರವಾರ ರಜೆ ಘೋಷಣೆ | 7 ದಿನ ಶೋಕಾಚರಣೆ

ನವದೆಹಲಿ: ಪ್ರಸಿದ್ಧ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (92) ಅವರು ಡಿ.26 (ಗುರುವಾರ) ರಾತ್ರಿ ನಿಧನ ಹೊಂದಿರುವ ಕುರಿತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಧೃಡಪಡಿಸಿದೆ.

ಆರೋಗ್ಯದಲ್ಲಿ ಏರು ಪೇರು ಆದ ಹಿನ್ನೆಲೆ ಅವರನ್ನು ದೆಹಲಿಯ ಏಮ್ಸ್ ಗೆ ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ. ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದರು ಎನ್ನಲಾಗಿದೆ.

ಮನಮೋಹನ್ ಸಿಂಗ್ 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡಿ ರಾಜಕೀಯದಲ್ಲಿ ಕಾಣಿಸಿಕೊಂಡರು. 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. 2004ರಿಂದ 2014ರ 2 ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

ಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ್ದು, ಡಾ. ಸಿಂಗ್ ಅವರು ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು 1948 ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದರು. 1957ರಲ್ಲಿ ಇಂಗ್ಲೆಂಡ್ ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪದವಿ ಪಡೆದು, 1962 ರಲ್ಲಿ  ಆಕ್ಸ್ ಫರ್ಡ್ ವಿಶ್ವ ವಿದ್ಯಾಲಯದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದಿದ್ದರು.

ಗಣ್ಯರ ಸಂತಾಪ: ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಗಲಿಕೆಗೆ ಕಾಂಗ್ರೆಸ್ ದಿಗ್ಗಜರು ತೀವ್ರ ಸಂತಾಪ ಸೂಚಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ  ವಾದ್ರಾ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಮೋದಿ ಸಂತಾಪ : ದೇಶದ ಪ್ರತಿಷ್ಠಿತ ನಾಯಕರಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಗಲಿಕೆಗೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತನ್ನ ಎಕ್ಸ್ ಖಾತೆಯಲ್ಲಿ ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಆರ್ಥಿಕ ನೀತಿಗಳ ಕುರಿತಂತೆ ಹೇಳಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತ ನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ತಾವು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಿದ್ದಾರೆ. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ.

ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ ಎಂದು ಹೇಳಿದ್ದಾರೆ.

ಶಾಸಕ ಶರಣಗೌಡ ಕಂದಕೂರ ಸಂತಾಪ: ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಸಂತಾಪ ಸೂಚಿಸಿದ್ದಾರೆ. ದೇಶದ ಪ್ರಸಿದ್ಧ ಅರ್ಥಶಾಸ್ತ್ರಜ್ಞರಾಗಿ, ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಅಗ್ರ ಗಣ್ಯ, ಮುತ್ಸದ್ದಿ ನಾಯಕರ ಕಳೆದುಕೊಂಡಿದ್ದೇವೆ ಎಂದಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!