ಫೆ.21 ರಂದು ಗುರುಮಠಕಲ್ ನಲ್ಲಿ ನಡೆದ ಶಿವಾಜಿ ಮಹಾರಾಜರ ಜಯಂತಿ | ಒಂದು ಕೋಮಿನ ಬಗ್ಗೆ ವಿವಾದಾತ್ಮಕ ಮಾತನಾಡಿದ ಹಿಂದು ಫೈಯರ್ ಬ್ರ್ಯಾಂಡ್ ವಿಜಯಪುರ ಶಾಸಕ ಬಸನಗೌಡ ಪಾಟೀಲ
ಗುರುಮಠಕಲ್: ಗುರುಮಠಕಲ್ ಪಟ್ಟಣದಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಭಾಷಣದ ವೇಳೆ ಕೋಮಿನ ಕುರಿತು ಮಾಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಒಂದು ಕೋಮಿನ ಭಾಷೆ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ಮಾಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ನೀಡಲಾದ ದೂರಿನ ಆಧಾರದಲ್ಲಿ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196, 299, 302, 352 ಹಾಗೂ 353 ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
