ಹುಮನಾಬಾದ್‌ನಲ್ಲಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಸಮಾಜದವರು

ಹುಮನಾಬಾದ್: ಕರ್ನಾಟಕದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ರಜಪೂತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ತಕ್ಷಣವೇ ರಜಪೂತ ಅಭಿವೃದ್ಧಿ ನಿಗಮ ಮಂಡಳಿಯನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ, ಹುಮನಾಬಾದ್ ತಾಲೂಕು ರಜಪೂತ ಸಮಾಜದ ವತಿಯಿಂದ  ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ತಹಶೀಲ್ದಾರರ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ರಜಪೂತ ಸಮಾಜದ ಪ್ರಮುಖರು ಹಾಗೂ ಯುವ ಮುಖಂಡರ ನಿಯೋಗವು, ತಹಶೀಲ್ದಾರರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸಮಾಜದ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಮುಖಂಡರು, ರಾಜ್ಯದಲ್ಲಿ ರಜಪೂತ ಸಮುದಾಯವು ಗಮನಾರ್ಹ ಜನಸಂಖ್ಯೆಯನ್ನು ಹೊಂದಿದ್ದರೂ, ರಾಜಕೀಯ ಮತ್ತು ಆರ್ಥಿಕ ಪ್ರಾತಿನಿಧ್ಯದಿಂದ ವಂಚಿತವಾಗಿದೆ. ಸಮುದಾಯದ ಬಡ ಕುಟುಂಬಗಳು, ಕೂಲಿ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ತಲುಪುತ್ತಿಲ್ಲ. ನಮ್ಮ ಸಮಾಜದ ಯುವಕರಿಗೆ ಉದ್ಯೋಗಾವಕಾಶ ಹಾಗೂ ಉನ್ನತ ಶಿಕ್ಷಣಕ್ಕೆ ನೆರವು ನೀಡಲು ಪ್ರತ್ಯೇಕ ನಿಗಮದ ಅಗತ್ಯತೆ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹಿಂದುಳಿದ ರಜಪೂತ ಸಮುದಾಯಕ್ಕೆ ನ್ಯಾಯ ಒದಗಿಸಲು ಸರ್ಕಾರ ಕೂಡಲೇ ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ನಿಯೋಗದ ಪ್ರಮುಖರು ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರವು ಇತರೆ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ನಿಗಮಗಳನ್ನು ಸ್ಥಾಪಿಸಿರುವ ಮಾದರಿಯಲ್ಲೇ, ರಜಪೂತ ಸಮಾಜದ ಕಲ್ಯಾಣಕ್ಕಾಗಿಯೂ ವಿಶೇಷ ಅನುದಾನದೊಂದಿಗೆ ನಿಗಮ ಸ್ಥಾಪಿಸಬೇಕು ಎಂದು ಒಕ್ಕೊರಲಿನಿಂದ ಒತ್ತಾಯಿಸಲಾಯಿತು. ಮನವಿ ಸ್ವೀಕರಿಸಿದ ತಹಶೀಲ್ದಾರರು, ಈ ಮನವಿಯನ್ನು ಸರ್ಕಾರದ ಗಮನಕ್ಕೆ ತರಲು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ಕಚೇರಿಗೆ ತಕ್ಷಣವೇ ರವಾನಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹುಮನಾಬಾದ್ ತಾಲೂಕು ರಜಪೂತ ಸಮಾಜದ ರಾಮಲಾಲ್ ಸಿಂಗ್, ಪ್ರಶಾಂತ್ ಠಾಕೂರ್ ವರವಟ್ಟಿ (ಕೆ), ಕಲಾವತಿ, ಮಹಾದೇವ್ ಠಾಕೂರ್, ಗೋವಿಂದ್ ಸಿಂಗ್, ಅಮರ್ ಸಿಂಗ್, ಗಣೇಶ್ ಹಜಾರೆ, ಮದನ್ ಸಿಂಗ್, ಮಹೇಶ ಹಜಾರೆ ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ ಪದಾಧಿಕಾರಿಗಳು, ಹಿರಿಯ ಮುಖಂಡರು ಹಾಗೂ ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!