ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ 39 ನೇ ರಾಜ್ಯ ಸಮ್ಮೇಳನ ಕಲ್ಪತರು ನಾಡು ತುಮಕೂರಿನಲ್ಲಿ ಜನವರಿ 18 ಮತ್ತು 19 ರಂದು ನಡೆಯಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜ. 18 ರಂದು ಬೆಳಿಗ್ಗೆ 8.30ಕ್ಕೆ ತುಮಕೂರಿನ ಟೌನ್ ಹಾಲ್ ಬಿಜಿಎಸ್ ವೃತ್ತದಿಂದ ಪತ್ರಕರ್ತರ ಸಾಂಸ್ಕೃತಿಕ ಮೆರವಣಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಚಾಲನೆ ನೀಡಲಿದ್ದಾರೆ. ನಾನಾ ಮಠಾಧೀಶರು ಭಾಗವಹಿಸಲಿದ್ದಾರೆ ಎಂದರು.
ಬೆಳಿಗ್ಗೆ 11ಕ್ಕೆ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣ ದಲ್ಲಿ ನಡೆಯುವ ಸಮ್ಮೇಳನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವರು. ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮಧ್ಯಾಹ್ನ 2ಕ್ಕೆ ಸಂವಿಧಾನ ಮತ್ತು ಮಾಧ್ಯಮ ಸಂವಾದ ನಡೆಯಲಿದೆ. ಸಚಿವ ಎಚ್.ಕೆ. ಪಾಟೀಲ್ ಉದ್ಘಾಟಿಸುವರು. ಸಂಜೆ 4.30ಕ್ಕೆ ಸುದ್ದಿಮನೆ ಮತ್ತು ಪೋಟೋಗ್ರಾಫಿ ಗೋಷ್ಠಿ ನಡೆಯಲಿದೆ ಎಂದು ತಿಳಿಸಿದರು.
ಜ. 19ರಂದು ಬೆಳಿಗ್ಗೆ 9ಕ್ಕೆ ಪ್ರತಿನಿಧಿಗಳ ಸಮಾವೇಶ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಮಾಧ್ಯಮ ಮತ್ತು ಓದುಗರು, ನೋಡುಗರು, ಕೇಳುಗರು ಗೋಷ್ಠಿ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಸಾಮಾಜಿಕ ಜಾಲತಾಣ ಮತ್ತು ಪತ್ರಕರ್ತರ ಸವಾಲುಗಳ ಕುರಿತು ಗೋಷ್ಠಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸ್ಥಳೀಯ ಪತ್ರಿಕೆಗಳು, ಜಾಹೀರಾತು, ವಿತರಕರು ಗೋಷ್ಠಿ ನಡೆಯಲಿದೆ ಎಂದರು.
ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೇಂದ್ರ ಸಚಿವರಾದ ವಿ. ಸೋಮಣ್ಣ, ಎಚ್.ಡಿ. ಕುಮಾರಸ್ವಾಮಿ, ಸಚಿವ ಡಾ. ಜಿ. ಪರಮೇಶ್ವರ ಸೇರಿದಂತೆ ಹಲವಾರು ಸಚಿವರು ಭಾಗವಹಿಸ ಲಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.