ವನದುರ್ಗ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ | ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ‘ಸ್ವಾಸ್ತ್ಯ ಸಂಕಲ್ಪ’ ಜಾಗೃತಿ
ಶಹಾಪೂರ: ಯುವ ಪೀಳಿಗೆ ಧೂಮಪಾನ, ಮದ್ಯಪಾನ ಸೇರಿದಂತೆ ಯಾವುದೇ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ ದೊರೆ ಹೇಳಿದರು.
ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಶಹಾಪುರ ತಾಲೂಕು ವತಿಯಿಂದ ಹಮ್ಮಿಕೊಂಡಿದ್ದ ‘ಸ್ವಾಸ್ತ್ಯ ಸಂಕಲ್ಪ’ ಜಾಗೃತಿ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ದೃಢ ಸಂಕಲ್ಪ ಮಾಡಿ ಯಾವುದೇ ಮಾದಕ ವ್ಯಸನಗಳಿಗೆ ಬಲಿಯಾಗಬಾರದು. ಮದ್ಯ ಹಾಗೂ ಮಾದಕ ವಸ್ತುಗಳ ಬಳಕೆಯಿಂದ ಕುಟುಂಬದ ಆರ್ಥಿಕ ಸ್ಥಿತಿ ಹದಗೆಡುವುದರ ಜೊತೆಗೆ ಸಮಾಜದ ಅಭಿವೃದ್ಧಿಗೂ ಧಕ್ಕೆಯಾಗುತ್ತದೆ. ವಿದ್ಯಾರ್ಥಿ ಜೀವನವೇ ಭವಿಷ್ಯದ ಅಡಿಪಾಯವಾಗಿದ್ದು, ಉತ್ತಮ ಸಂಸ್ಕಾರ, ಶಿಸ್ತು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಬ್ದುಲ್ ಮಾತನಾಡಿ, ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ವಿವರಿಸಿದರು. ಧೂಮಪಾನ ಮತ್ತು ಮದ್ಯಪಾನದಿಂದ ಕ್ಯಾನ್ಸರ್, ಶ್ವಾಸಕೋಶ ಸಂಬಂಧಿತ ಕಾಯಿಲೆಗಳು ಸೇರಿದಂತೆ ಅನೇಕ ಗಂಭೀರ ಸಮಸ್ಯೆಗಳು ಉಂಟಾಗುತ್ತವೆ. ಇಂತಹ ದುಶ್ಚಟಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಜಾಗೃತರಾಗಿ ಆರೋಗ್ಯಕರ ಹಾಗೂ ಮೌಲ್ಯಯುತ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.
ಚಾಮನಾಳ ವಲಯ ಮೇಲ್ವಿಚಾರಕರಾದ ದೇವರಾಜ್ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಸೇವಾ, ಶೈಕ್ಷಣಿಕ ಸೇರಿದಂತೆ ವಿವಿಧ ಜನೋಪಯೋಗಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯ ಶಂಕ್ರಪ್ಪ, ಶಿಕ್ಷಕರಾದ ಪ್ರಿಯಾ, ಶಿವರಾಜ್, ಸ್ವಪ್ನ, ಲಕ್ಷ್ಮೀ, ಹುಲಿಗೆಮ್ಮ, ಪಾರ್ವತಿ, ಭಾಗ್ಯಶ್ರೀ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
