ಯಾದಗಿರಿಯಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಪ್ರತಿಭಟನೆ


ಯಾದಗಿರಿ: ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ಪರಿಹರಿಸಲು ಹಾಗೂ ಕೂಡಲೇ ಉಪನ್ಯಾಸಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಓ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಯಾದಗಿರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಸುಭಾಷ್ ಚೌಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಮಾತನಾಡಿ, ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ ಎಂದರು.

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ.

ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಆಗ್ರಹಿಸಿದರು.

ಬೇಡಿಕೆಯ ಮನವಿ ಪತ್ರವನ್ನು ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಕಛೇರಿ ಅಧೀಕ್ಷಕ ಮನವಿ ಪತ್ರ ಸ್ವೀಕರಿಸಿ ಕೂಡಲೇ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಪತ್ರ ರವಾನಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಅನೀತಾ, ಮಹೇಶ್ವರಿ, ಅಶ್ವೀನಿ, ರೇಣುಕಾ, ಸೋನಿ, ಕಾವೇರಿ, ಕವಿತಾ, ಅನಿತಾ, ಸುನೀತಾ, ಮುತ್ತಮ್ಮ, ಪ್ರೀಯಾ, ಸುಷ್ಮಾ, ರಾಧಾ, ಶರಣು, ಶಂಕರ್, ಬಸವರಾಜ, ವಿಶ್ವರಾಜ ಸೇರಿದಂತೆ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!