ಕಾಶಪ್ಪ ಎಂ. ಹೇಳಿಕೆ | ಲೇಖಕ ಮತ್ತು ಪ್ರಕಾಶಕರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಯಾದಗಿರಿ: 12ನೇ ಶತಮಾನದ ಮಹಾನ್ ಮಾನವತಾವಾದಿ, ವಿಶ್ವಗುರು, ಸಮಾನತೆಯ ಹರಿಕಾರ ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರ ವ್ಯಕ್ತಿತ್ವ ಮತ್ತು ವಿಚಾರಧಾರೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಲೇಖಕ ರವಿ ಹಂಜ್ ಅವರು ರಚಿಸಿರುವ ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಅಂಶಗಳನ್ನು ಪ್ರಕಟಿಸಿರುವ ಆರೋಪವನ್ನು ಮಾದಿಗ ದಂಡೋರ (MRPS) ಯಾದಗಿರಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಅಧ್ಯಕ್ಷರಾದ  ಕಾಶಪ್ಪ ಎಂ. ಅವರು, ಬಸವಣ್ಣನವರು ಜಾತಿ ವ್ಯವಸ್ಥೆ, ಅಸಮಾನತೆ ಮತ್ತು ಸಾಮಾಜಿಕ ಶೋಷಣೆಯ ವಿರುದ್ಧ ಹೋರಾಡಿ ಶೋಷಿತರು, ದಲಿತರು ಸೇರಿದಂತೆ ಸಮಾಜದ ಪ್ರತಿಯೊಬ್ಬರಿಗೂ ಸಮಾನತೆಯ ಸಂದೇಶ ಸಾರಿದ ಮಹಾನ್ ದಾರ್ಶನಿಕರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಅವಹೇಳನಕಾರಿ ಬರಹಗಳನ್ನು ಪ್ರಕಟಿಸಿರುವ ಆರೋಪ ಅತ್ಯಂತ ಗಂಭೀರವಾಗಿದ್ದು, ಸಮಾಜದ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಈಗಾಗಲೇ ವಿವಾದಿತ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವ ಕುರಿತು ಕೈಗೊಂಡಿರುವ ನಿರ್ಧಾರವನ್ನು MRPS ಜಿಲ್ಲಾ ಸಮಿತಿಯು ಸ್ವಾಗತಿಸುತ್ತದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಖಕ ಹಾಗೂ ಪ್ರಕಾಶಕರ ವಿರುದ್ಧ ದಾಖಲಾಗಿರುವ FIR ಆಧರಿಸಿ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದಿದ್ದಾರೆ.

ಸಮಾಜದಲ್ಲಿ ಜಾತಿ, ಧರ್ಮ ಹಾಗೂ ಸಮುದಾಯಗಳ ನಡುವೆ ದ್ವೇಷ ಮತ್ತು ಅಶಾಂತಿ ಉಂಟು ಮಾಡುವಂತಹ ಯಾವುದೇ ಬರಹ, ಹೇಳಿಕೆ ಅಥವಾ ಕೃತ್ಯಗಳ ವಿರುದ್ಧ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಯಾವುದೇ ವ್ಯಕ್ತಿಯ ಅಥವಾ ಸಮುದಾಯದ ಗೌರವ ಮತ್ತು ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಉಂಟಾಗಬಾರದು.

ಬಸವಣ್ಣನವರ ಸಮಾನತೆ, ಕಾಯಕ, ದಾಸೋಹ ಮತ್ತು ಮಾನವೀಯತೆಯ ತತ್ವಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಅವರ ವಿಚಾರಧಾರೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕಾನೂನು ಪ್ರಕ್ರಿಯೆಯ ಮೂಲಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!